
ಕಲಬುರಗಿ, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ ಕಲಬುರಗಿಯಲ್ಲಿ ಶುಕ್ರವಾರ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಹೈಕೋರ್ಟ್ ಸರ್ಕಲ್ ಹಾಗೂ ಸಿದ್ದರಾಮಯ್ಯ ವೃತ್ತದ ಬಳಿ ಜಮಾಯಿಸಿದ ಅಭಿಮಾನಿಗಳು ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ತೆರವುಗೊಳಿಸಿರುವ ಸ್ಥಳದಲ್ಲೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮತ್ತೆ ಮರುಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಫಜಲಪುರಕ್ಕೆ ತೆರಳುವ ರಸ್ತೆ ಬಳಿಯೂ ಪ್ರತಿಭಟನೆ ನಡೆಸಿದ ಅಭಿಮಾನಿಗಳು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದ ಕೆಲ ಅಭಿಮಾನಿಗಳನ್ನು ಬಂಧಿಸಿ ವಶಕ್ಕೆ ಪಡೆದರು.
“ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವುದು ಖಂಡನೀಯ. ಯಾವ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತೋ ಅದೇ ಸ್ಥಳದಲ್ಲಿ ಮತ್ತೆ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು.
ಮಹಾನಗರ ಪಾಲಿಕೆ ಕೂಡಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಮೂರ್ತಿ ತೆರವು ಕ್ರಮವನ್ನು ಖಂಡಿಸಿ ಮುಂದಿನ ಹೋರಾಟ ನಡೆಸುವುದಾಗಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಮುಖಂಡರು ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R