
ನವದೆಹಲಿ, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆ ಸಂದರ್ಭದಲ್ಲಿ ಕಾನೂನು ಕೇಂದ್ರದಲ್ಲಿ ನಕಲಿ ಗುರುತಿನ ಚೀಟಿಯ ಮೂಲಕ ಮತ ಚಲಾಯಿಸಲು ಬಂದಿದ್ದ ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಗೆ (ಎನ್‌ಎಸ್‌ಯುಐ) ಸಂಬಂಧಿಸಿದ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಹ ಸಂಯೋಜಕ ಸಿದ್ಧಾರ್ಥ್ ಯಾದವ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ನಿರಂತರವಾಗಿ ‘ಮತ ಕಳವು’ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಅವರ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐಗೆ ಸಂಬಂಧಿಸಿದ ಕಾರ್ಯಕರ್ತೆಯೊಬ್ಬರು ನಕಲಿ ಗುರುತಿನ ಚೀಟಿಯೊಂದಿಗೆ ಮತ ಚಲಾಯಿಸಲು ಬಂದು ಸಿಕ್ಕಿಬಿದ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಯುವಜನರ ಬಳಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಸಿದ್ಧಾರ್ಥ್ ಯಾದವ್ ಆಗ್ರಹಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಎಲ್ಲ ರಾಜಕೀಯ ಪಕ್ಷಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ದೆಹಲಿಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಚುನಾವಣೆಗೆ ಶುಕ್ರವಾರ ಮತದಾನ ನಡೆದಿದ್ದು, ಶನಿವಾರ ಮತ ಎಣಿಕೆ ಕಾರ್ಯ ಮುಂದುವರಿದಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.