
ಕೋಲಾರ, ಸೆಪ್ಟೆಂಬರ್ ೧೯ (ಹಿ.ಸ)
ಆ್ಯಂಕರ್ : ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾಗಿರುವ ವಿಬಿಜಿರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಹೇಳಿದರು.
ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿಯ ಯಲ್ದೂರು ಗ್ರಾಮದಲ್ಲಿ ಪ್ರಜಾ ಸೇವಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಿಬಿಜಿರಾಮ್ ಜಿ ಯೋಜನೆಯ ಮಾಹಿತಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಜಾಬ್ ಕಾರ್ಡ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳ ಕುರಿತು ಗ್ರಾಮೀಣ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಅರ್ಹರು ಜಾಬ್ ಕಾರ್ಡ್ ಪಡೆದುಕೊಂಡು ಯೋಜನೆಯ ಸೌಲಭ್ಯಗಳನ್ನು ಪಡೆಯಬೇಕು ಎಂದು ತಿಳಿಸಿದರು.
ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳು ತಮ್ಮ ಗ್ರಾಮ ಪಂಚಾಯತಿಯ ಮೂಲಕ ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಪಡೆದುಕೊಳ್ಳಬಹುದು. ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಆಸ್ತಿಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯೋಜನೆಯಡಿ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಯೋಜನೆಯಡಿ ವೈಯಕ್ತಿಕವಾಗಿ ದನದಶೆಡ್, ಕುರಿ, ಮೇಕೆ ಶೆಡ್, ಕೋಳಿಶೆಡ್, ಕೊಳವೆಬಾವಿ ಮರುಪೂರಣ ಘಟಕ ,ಕೃಷಿ ಹೊಂಡ, ಬದು ನಿರ್ಮಾಣ, ಮಳೆ ನೀರು ಕೊಯ್ಲು, ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳು ಸೇರಿ ರೇಷ್ಮೆ ಬೆಳೆಗೆ ಸಹಾಯಧನ ನೀಡಲಾಗುವುದು. ಗ್ರಾಮೀಣ ಜನರು ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ, ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಸರ್ವೇಶ್, ಸಹಾಯಕ ನಿರ್ದೇಶಕರಾದ ರಾಮಪ್ಪ, ವಿಬಿಜಿರಾಮ್ ಜಿ ಯೋಜನೆಯ ಸಿಬ್ಬಂದಿ, ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್