
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಥಕ ಜನಸೇವೆ ಹಾಗೂ ಸಮರ್ಥ ನಾಯಕತ್ವದ ಮೂಲಕ ಯಶಸ್ವಿ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಕ್ಷ ನಡೆಸುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಸಂದರ್ಭದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದಾಗಿ ವಿಜಯೇಂದ್ರ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ವಿಕಸಿತ ಭಾರತದ ಸಾಕಾರದ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಗೆ ಅನುಗುಣವಾಗಿ ಅಮಿತ್ ಶಾ ಅವರು ಹಗಲಿರುಳು ಶ್ರಮಿಸುತ್ತಿದ್ದು, ಅವರ ದೃಢ ನಾಯಕತ್ವ ಪಕ್ಷದ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ನಡೆಸಲಾದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂಪೂರ್ಣ ವಿವರಗಳನ್ನು ಅಮಿತ್ ಶಾ ಅವರಿಗೆ ಇದೇ ಸಂದರ್ಭದಲ್ಲಿ ಸಲ್ಲಿಸಲಾಗಿದೆ. ಯಾತ್ರೆಯುದ್ದಕ್ಕೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ನೀಡಿದ ಬೆಂಬಲದ ಬಗ್ಗೆಯೂ ವಿವರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು ಹಾಗೂ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಅಮಿತ್ ಶಾ ಅವರಿಂದ ಮಾರ್ಗದರ್ಶನ ಪಡೆಯಲಾಗಿದೆ. ಬಳ್ಳಾರಿ ಚಲೋ ಸೇರಿದಂತೆ ರಾಜ್ಯದಲ್ಲಿ ಪಕ್ಷ ಸಂಘಟನೆಯ ಚಟುವಟಿಕೆಗಳ ಕುರಿತು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.
2028ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ಹಾಗೂ ಜನಜಾಗೃತಿ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.