ಗ್ಯಾರಂಟಿ ಸಮಿತಿಗಳ ರಚನೆಗೆ 15 ದಿನಗಳ ಗಡುವು: ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ
ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಗಳ ರಚನೆ ಪ್ರಕ್ರಿಯೆಯನ್ನು ಚುರುಕುಗೊಳಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್
ಗ್ಯಾರಂಟಿ ಸಮಿತಿಗಳ ರಚನೆಗೆ 15 ದಿನಗಳ ಗಡುವು: ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ


ಗ್ಯಾರಂಟಿ ಸಮಿತಿಗಳ ರಚನೆಗೆ 15 ದಿನಗಳ ಗಡುವು: ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ


ಗ್ಯಾರಂಟಿ ಸಮಿತಿಗಳ ರಚನೆಗೆ 15 ದಿನಗಳ ಗಡುವು: ಪಿ.ಟಿ. ಪರಮೇಶ್ವರ ನಾಯ್ಕ ಸೂಚನೆ


ಬಳ್ಳಾರಿ, 02 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಗಳ ರಚನೆ ಪ್ರಕ್ರಿಯೆಯನ್ನು ಚುರುಕುಗೊಳಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಅವರು ಹೇಳಿದರು.

ನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ಹಾಗೂ ಅನುಷ್ಠಾನ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ಕುರಿತು ಬುಧವಾರ ಸಭೆ ನಡೆಸಿ ಅವರು ಮಾತನಾಡಿದರು.

ಪಂಚಾಯಿತಿ ಮಟ್ಟ ಹಾಗೂ ನಗರ ಪ್ರದೇಶಗಳಲ್ಲಿ ಗ್ಯಾರಂಟಿ ಸಮಿತಿಗಳನ್ನು ತುರ್ತಾಗಿ ರಚಿಸಲು ಶಾಸಕರಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಶಾಸಕರ ನೇತೃತ್ವದಲ್ಲೇ ಈ ಸಮಿತಿಗಳ ಪಟ್ಟಿ ಅಂತಿಮಗೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾವುದೇ ಗೊಂದಲಗಳಿಲ್ಲದಿದ್ದರೂ, ಪಟ್ಟಣ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಮಿತಿಗಳ ರಚನೆಯಲ್ಲಿ ಎದುರಾಗಿರುವ ತೊಡಕುಗಳನ್ನು ಶೀಘ್ರವಾಗಿ ಬಗೆಹರಿಸಲು ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು, ಇವು ಕೇವಲ ಯೋಜನೆಗಳಲ್ಲ, ಇತಿಹಾಸ ಸೃಷ್ಟಿಸಿರುವ ಸಾಮಾಜಿಕ ಭದ್ರತೆಯ ಕಾರ್ಯಕ್ರಮಗಳಾಗಿವೆ. ಹಿಂದೆ ನೀಡಲಾಗುತ್ತಿದ್ದ ವೃದ್ಧಾಪ್ಯ, ವಿಧವಾ ವೇತನ ಹಾಗೂ ವಿಕಲಚೇತನರ ಪಿಂಚಣಿಗಳು ನಿರ್ದಿಷ್ಟ ವರ್ಗದ ಸಂಕಷ್ಟಗಳಿಗೆ ಆಸರೆಯಾಗಿದ್ದವು. ಆದರೆ, ಪ್ರಸ್ತುತ ಜಾರಿಯಲ್ಲಿರುವ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿಯಂತಹ ಯೋಜನೆಗಳು ಪ್ರತಿಯೊಂದು ಬಡ ಕುಟುಂಬಕ್ಕೂ ಆರ್ಥಿಕ ಸ್ವಾವಲಂಬನೆ ತಂದುಕೊಟ್ಟಿವೆ ಎಂದು ಅಭಿಮತ ವ್ಯಕ್ತಪಡಿಸಿದರು.

ಎಲ್ಲಾ ಜಾತಿ, ಧರ್ಮಗಳ ಬಡ ಜನರು ಸಮಾಜದಲ್ಲಿ ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಬದ್ಧತೆಯಿಂದ ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಒಟ್ಟು 168 ಸಮಿತಿಗಳ ಸ್ಥಾಪನೆ:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಬಳ್ಳಾರಿ ಜಿಲ್ಲೆಯಾದ್ಯಂತ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 168 ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಆದೇಶದಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮಿತಿಗಳ ರಚನೆಗೆ ಅಗತ್ಯ ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 68 ಗ್ಯಾರಂಟಿ ಸಮಿತಿಗಳು ಅಸ್ತಿತ್ವಕ್ಕೆ ಬರಲಿವೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವಾರ್ಡ್ಗಳ ಆಧಾರದ ಮೇಲೆ ಸಮಿತಿಗಳನ್ನು ಹಂಚಿಕೆ ಮಾಡಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ 100 ಸಮಿತಿಗಳು:

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪಾರದರ್ಶಕ ಆಡಳಿತ ಮತ್ತು ಯೋಜನೆಗಳ ತ್ವರಿತ ತಲುಪುವಿಕೆಗೆ ಪೂರಕವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸಮಿತಿ ರಚಿಸಲಾಗುತ್ತಿದೆ. ಜಿಲ್ಲೆಯ 5 ತಾಲ್ಲೂಕುಗಳ ಒಟ್ಟು 100 ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದೊಂದು ಸಮಿತಿಯಂತೆ 100 ಗ್ಯಾರಂಟಿ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದರು.

ಈ ಸಮಿತಿಗಳು ಸ್ಥಳೀಯ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕಾರ್ಯನಿರ್ವಹಿಸಲಿವೆ ಎಂದು ವಿವರಿಸಿದರು.

ಸರ್ಕಾರದ ಜನಪರ ಯೋಜನೆಗಳು ಹಾಗೂ ಅವುಗಳಿಗಾಗಿ ವೆಚ್ಚ ಮಾಡುತ್ತಿರುವ ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಬಗ್ಗೆ ಸಾರ್ವಜನಿಕರಿಗೆ ಸಮರ್ಪಕವಾಗಿ ಮಾಹಿತಿ ತಲುಪಿಸಬೇಕು. ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಅವುಗಳ ಉಳಿವಿಗೆ ಸಮಿತಿ ಸದಸ್ಯರು ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ತಳಮಟ್ಟದಿಂದ ಪ್ರಚಾರ ನಡೆಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಬಳ್ಳಾರಿ ತಾಲೂಕು ಅಧ್ಯಕ್ಷ ಗೋನಾಳ್ ನಾಗಭೂಷಣಗೌಡ, ಕುರುಗೋಡು ತಾಲೂಕು ಅಧ್ಯಕ್ಷ ಬಸವನಗೌಡ ಸೇರಿದಂತೆ ಸಮಿತಿಯ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande