
ಗದಗ, 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಶಿಕ್ಷಣದ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡಿದರೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳು ದೊರೆಯುವುದರೊಂದಿಗೆ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗಲಿದೆ ಎಂದು ಹಿರಿಯ ದೈಹಿಕ ಶಿಕ್ಷಣ ಉಪನ್ಯಾಸಕ ವೈ.ಎಸ್. ಹುನಗುಂದ ಹೇಳಿದರು.
ಗದಗ ನಗರದ ತೋಂಟದ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಶೈಕ್ಷಣಿಕ ಅಂಕಗಳ ಆಧಾರದ ಮೇಲೆಯೇ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗುವುದಿಲ್ಲ. ವಿದ್ಯಾರ್ಥಿಗಳು ಪಠ್ಯ ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಅದರಲ್ಲಿ ನಿರಂತರವಾಗಿ ಸಾಧನೆ ಮಾಡುವ ಮೂಲಕ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಿದರೆ ಮಾತ್ರ ಉತ್ತಮ ಉದ್ಯೋಗ ದೊರೆಯುತ್ತದೆ ಎಂಬ ಮನೋಭಾವದಿಂದ ಹೊರಬರಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಇಂದು ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ. ಕ್ರೀಡಾ ಪ್ರತಿಭೆಗೆ ಸರ್ಕಾರ ಹಾಗೂ ವಿವಿಧ ಸಂಸ್ಥೆಗಳು ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡೆಯು ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಾಗಿಲ್ಲ. ಅದು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವವನ್ನು ಬೆಳೆಸುವ ಪ್ರಮುಖ ಸಾಧನವಾಗಿದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಕಲಿಸಿಕೊಡುತ್ತದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹುನಗುಂದ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ವೈ.ಎಸ್. ಮತ್ತೂರ ಮಾತನಾಡಿ, ಮಕ್ಕಳ ದೇಹ ಸದೃಢವಾಗಿದ್ದರೆ ಮಾತ್ರ ಅವರ ಮನಸ್ಸು ಕೂಡ ಸದೃಢವಾಗಿರಲು ಸಾಧ್ಯ. ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ನಿರಂತರವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಮತ್ತು ಪರಸ್ಪರ ಸಹಕಾರದ ಮನೋಭಾವ ಬೆಳೆಯುತ್ತದೆ. ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಇತರ ಪ್ರತಿಭೆಗಳಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳು ಸರ್ವತೋಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಸೀಮಿತರಾಗದೆ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಅದನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಹಾಗೂ ಅವರಲ್ಲಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಪ್ರತಿಭಾ ನಾಯ್ಕಲ್ ಹಾಗೂ ಸಂಗಡಿಗರು ವಚನ ಪ್ರಾರ್ಥನೆ ನೆರವೇರಿಸಿದರು. ಕಾಲೇಜಿನ ಕ್ರೀಡಾ ಕಾರ್ಯಾಧ್ಯಕ್ಷ ಎನ್.ವಿ. ಕಡಗದ ಸ್ವಾಗತಿಸಿದರು. ಭಾಗ್ಯಲಕ್ಷ್ಮೀ ಚವಡಿ ವಂದಿಸಿದರು. ಪ್ರತಿಭಾ ಪಟೇದ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾದ ಎಫ್.ಆರ್. ದೊಡ್ಡಣ್ಣವರ, ವೀರೇಶ ಸೂಡಿ, ನಾಗರಾಜ ತಳವಾರ, ಕಾರ್ತಿಕ ಪೊಲೀಸ್ಪಾಟೀಲ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಕುಮಾರಿ ಶಶಿಕಲಾ ಡಂಬಳ, ದರ್ಶನ ಆಯ್ಕೆ ಹಾಗೂ ಜ್ಯೋತಿಕಾ ಮಸ್ಕಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP