
ಮೈಸೂರು, 02 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಭೇಟಿ ನೀಡಿ, ಮಳೆ ಕೊರತೆಯಿಂದ ಹಾನಿಗೊಳಗಾದ ರೈತರ ಜಮೀನುಗಳನ್ನು ಪರಿಶೀಲಿಸಿದರು.
ಗ್ರಾಮದ ರೈತರಾದ ಶಿವಬಸಪ್ಪ ಮತ್ತು ಮಹದೇವಪ್ಪ ಅವರ ಜಮೀನುಗಳಿಗೆ ತೆರಳಿ ಮೆಕ್ಕೆಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ಒಣಗಿ ನಾಶವಾಗಿರುವುದನ್ನು ವೀಕ್ಷಿಸಿದರು. ಸಾಲ ಮಾಡಿ ಬೆಳೆ ಬೆಳೆದಿದ್ದು, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವುದಾಗಿ ರೈತರು ತಮ್ಮ ಅಳಲು ತೋಡಿಕೊಂಡರು.
ಬಳಿಕ ಅಧಿಕಾರಿಗಳಿಂದ ತಾಲ್ಲೂಕಿನ ಬರ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು. ತಾಲ್ಲೂಕಿನಲ್ಲಿ ಸಾಮಾನ್ಯವಾಗಿ ಅಲಸಂದೆ, ಉದ್ದು, ಹೆಸರು, ಮೆಕ್ಕೆಜೋಳ ಹಾಗೂ ಹತ್ತಿ ಸೇರಿದಂತೆ ವಿವಿಧ ಬೆಳೆಗಳನ್ನು ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಆದರೆ ಈ ಬಾರಿ ಮಳೆ ಕೊರತೆಯಿಂದ ಕೇವಲ 3,500 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ಬಿತ್ತನೆಯಾದ ಬೆಳೆಗಳೂ ತೀವ್ರ ಬರದಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ರೈತರು ಹಾಗೂ ಅಧಿಕಾರಿಗಳಿಂದ ವಸ್ತುಸ್ಥಿತಿಯ ಸಂಪೂರ್ಣ ಮಾಹಿತಿ ಪಡೆದ ಪರಮೇಶ್ವರ, ಶೀಘ್ರ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ರೈತರ ಸಂಕಷ್ಟಕ್ಕೆ ಸರ್ಕಾರ ಸದಾ ಸ್ಪಂದಿಸಲಿದೆ ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.