
ಗದಗ, 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ, ನರಗುಂದ ಇವರ ಸಹಯೋಗದಲ್ಲಿ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸುವ ಮಹತ್ವದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ನಗರದ ಅಧ್ಯಾಪಕ ನಗರದಲ್ಲಿರುವ ನರಗುಂದ-84ನೇ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಮತ್ತು ಪೋಷಣೆ ಅಭಿಯಾನದ ಸಮುದಾಯ ಆಧಾರಿತ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಉತ್ತಮ ಕಲಿಕಾ ವಾತಾವರಣ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಪ್ಪ ಗಿರಿತಿಮ್ಮಣ್ಣವರ ಅವರು ಸರಸ್ವತಿ ಪೂಜೆ ನೆರವೇರಿಸಿ, ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಆರೋಗ್ಯ, ಪೌಷ್ಟಿಕತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ವಾತಾವರಣ ಕಲ್ಪಿಸುವುದು ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಮೇಲ್ವಿಚಾರಕಿ ಶಕುಂತಲಾ ಗಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ನೀಡುವ ಉದ್ದೇಶದಿಂದ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದರಿಂದ ಮಕ್ಕಳಿಗೆ ಶಾಲಾ ಶಿಕ್ಷಣಕ್ಕೆ ಮುನ್ನ ಅಗತ್ಯವಾದ ಕಲಿಕಾ ಅನುಭವ ದೊರೆಯುವುದರ ಜತೆಗೆ ಪೋಷಕರಿಗೂ ಅನುಕೂಲವಾಗಲಿದೆ ಎಂದರು.
ಸರ್ಕಾರಿ ಅಂಗನವಾಡಿಗಳಿಗೆ ಹೊಸ ರೂಪ
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಪ್ಪ ಗಿರಿತಿಮ್ಮಣ್ಣವರ ಮಾತನಾಡಿ, ಇಲಾಖೆಯ ನಿರ್ದೇಶನದಂತೆ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಮಾಂಟೆಸ್ಸರಿ ಶಾಲೆಗಳ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮಕ್ಕಳಿಗೆ ಆಕರ್ಷಕ ಹಾಗೂ ನವೀನ ಮಾದರಿಯ ಶಾಲಾ ಪೂರ್ವ ಶಿಕ್ಷಣ ನೀಡುವ ಜತೆಗೆ, ಮನರಂಜನೆಯೊಂದಿಗೆ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಟಿ.ವಿ. ಮೂಲಕ ಶೈಕ್ಷಣಿಕ ಹಾಗೂ ಮನರಂಜನಾ ಚಟುವಟಿಕೆಗಳನ್ನು ಪರಿಚಯಿಸುವುದು, ಮಕ್ಕಳಿಗೆ ಸಮವಸ್ತ್ರಧಾರಿತ ಶಿಕ್ಷಣ ನೀಡುವುದು, ಶಿಸ್ತು ಹಾಗೂ ಸಮಯ ಪಾಲನೆ ಬೆಳೆಸುವುದು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಕೇವಲ ಪೌಷ್ಟಿಕ ಆಹಾರ ವಿತರಿಸುವ ಕೇಂದ್ರಗಳಾಗಿರದೆ, ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕುವ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಾಗಿ ರೂಪುಗೊಳ್ಳಬೇಕು ಎಂಬುದು ಇಲಾಖೆಯ ಆಶಯವಾಗಿದೆ ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಗೆ ಆದ್ಯತೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುವ ಬದಲು ಸರ್ಕಾರಿ ಅಂಗನವಾಡಿ ಕೇಂದ್ರಗಳಲ್ಲಿಯೇ ಗುಣಮಟ್ಟದ ಆರಂಭಿಕ ಶಿಕ್ಷಣ ಪಡೆಯುವಂತೆ ಉತ್ತೇಜಿಸುವ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ಹೇಳಿದರು.
ಅಂಗನವಾಡಿ ಸಿಬ್ಬಂದಿ ಸೇವೆಗೆ ಗೌರವ ಅಗತ್ಯ
ನಿವೃತ್ತ ಶಿಕ್ಷಕ ಎಸ್.ವೈ. ಹುನಗುಂಡಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸಮಾಜದಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಮಕ್ಕಳ ಪಾಲನೆ, ಪೋಷಣೆ, ಆರೋಗ್ಯ ಹಾಗೂ ಶೈಕ್ಷಣಿಕ ಬೆಳವಣಿಗೆಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಹಲವು ಹೆಚ್ಚುವರಿ ಜವಾಬ್ದಾರಿಗಳ ನಡುವೆಯೂ ಅಂಗನವಾಡಿ ಸಿಬ್ಬಂದಿ ಮಕ್ಕಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಸೇವೆಯನ್ನು ಸಮಾಜ ಗುರುತಿಸಿ ಸೂಕ್ತ ಗೌರವ ನೀಡಬೇಕು ಎಂದು ಹೇಳಿದರು.
ಮಕ್ಕಳ ಜೀವನದ ಆರಂಭಿಕ ಹಂತದಲ್ಲಿಯೇ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳಾಗಿ ಅಭಿವೃದ್ಧಿಪಡಿಸುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೂ ಸಮಾನ ಶಿಕ್ಷಣದ ಅವಕಾಶ ಕಲ್ಪಿಸಲು ಇದು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ
ಕಾರ್ಯಕ್ರಮದ ಅಂಗವಾಗಿ ಪೋಷಣೆ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಗರ್ಭಿಣಿಯರು, ಮಕ್ಕಳು ಹಾಗೂ ಪೋಷಕರಲ್ಲಿ ಪೌಷ್ಟಿಕತೆ, ಆರೋಗ್ಯ ಮತ್ತು ಮಕ್ಕಳ ಸಮಗ್ರ ಬೆಳವಣಿಗೆ ಕುರಿತು ಅರಿವು ಮೂಡಿಸುವ ಪ್ರಯತ್ನ ನಡೆಯಿತು. ಇದೇ ಸಂದರ್ಭದಲ್ಲಿ ಪ್ರಥಮ ಬಾರಿಗೆ ಗರ್ಭಿಣಿಯಾಗಿರುವ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು.
ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯದ ಕಡೆಗೆ ಕುಟುಂಬಗಳು ಹೆಚ್ಚಿನ ಗಮನಹರಿಸಬೇಕು. ಗರ್ಭಾವಸ್ಥೆಯಿಂದಲೇ ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದ್ದು, ಪೌಷ್ಟಿಕ ಆಹಾರ ಸೇವನೆ, ಆರೋಗ್ಯ ತಪಾಸಣೆ ಹಾಗೂ ಇಲಾಖೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಡಾ. ಜೆ.ಎಸ್. ನುಗ್ಗಾನಟ್ಟಿ, ಪಿ.ಟಿ. ಸೂರ್ಯವಂಶಿ, ಎಂ.ಕೆ. ಹಿರೇಗೌಡ್ರ, ಟಿ.ಆರ್. ಉಳ್ಳಾಗಡ್ಡಿ, ಎನ್.ಕೆ. ಬ್ಯಾಳಿ, ನಿವೃತ್ತ ಶಿಕ್ಷಕ ಎಸ್.ವೈ. ಹುನಗುಂಡಿ, ಪೋಷಣ್ ಅಭಿಯಾನದ ತಾಲೂಕು ಸಂಯೋಜಕ ಮಂಜುನಾಥ ಗುಗ್ಗರಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಮಲಾ ಹಿರೇಮಠ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸರ್ಕಾರಿ ಅಂಗನವಾಡಿಗಳತ್ತ ಪೋಷಕರ ಗಮನ ಸೆಳೆಯುವ ಪ್ರಯತ್ನ
ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳ ಆರಂಭದೊಂದಿಗೆ ಸರ್ಕಾರಿ ವ್ಯವಸ್ಥೆಯಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಹೊಸ ಪ್ರಯತ್ನಕ್ಕೆ ನಾಂದಿ ಹಾಡಲಾಗಿದೆ.
ಖಾಸಗಿ ಶಾಲೆಗಳತ್ತ ಪೋಷಕರ ಒಲವು ಹೆಚ್ಚುತ್ತಿರುವ ಸಂದರ್ಭದಲ್ಲಿ, ಸರ್ಕಾರಿ ಅಂಗನವಾಡಿ ಕೇಂದ್ರಗಳಲ್ಲಿಯೇ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣ, ಶಿಸ್ತು, ಮನರಂಜನೆಯೊಂದಿಗೆ ಶಿಕ್ಷಣ ಮತ್ತು ಪೌಷ್ಟಿಕತೆಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯತ್ತ ಪೋಷಕರ ವಿಶ್ವಾಸ ಹೆಚ್ಚಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP