
ಕೋಲಾರ: 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಪ್ರಥಮ ಪ್ರಜಾಸೇವಾ ಆಂದೋಲನ' ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಯಶಸ್ವಿಯಾಗಿ ಆಯೋಜಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ . ಪ್ರವೀಣ್ ಪಿ. ಬಾಗೇವಾಡಿ ಸೂಚನೆ ನೀಡಿದರು.
ಕೋಲಾರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸೆಪ್ಟೆಂಬರ್ ೫ ರಂದು ಬೆಳಿಗ್ಗೆ ೭.೦೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಬೃಹತ್ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಲು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಅವರು, ಕಾರ್ಯಕ್ರಮ ನಿರ್ವಹಣೆಗೆ ಒಟ್ಟು ಒಂಬತ್ತು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ವೇದಿಕೆ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತೆ ಮತ್ತು ಪ್ರಚಾರ ಸಮಿತಿಗಳು ಸೇರಿದಂತೆ ಎಲ್ಲಾ ಸಮಿತಿಗಳು ಒಂದಕ್ಕೊಂದು ಬೆಸೆದುಕೊಂಡು ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು. ಮುಖ್ಯ ವೇದಿಕೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಜನಪ್ರತಿನಿಧಿಗಳಿಗೆ ಆಸನ ವ್ಯವಸ್ಥೆ ಮಾಡಬೇಕು. ಇದರ ಜೊತೆಗೆ ತಮ್ಮ ಕುಂದುಕೊರತೆಗಳನ್ನು ತೋಡಿಕೊಳ್ಳಲು ಬರುವ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಸಾರ್ವಜನಿಕರಿಗೆ ಸೂಕ್ತ ಆಸನದ ವ್ಯವಸ್ಥೆಯನ್ನು ಕಲ್ಪಿಸಲು ಸಂಬAಧಪಟ್ಟ ನಿರ್ಮಿತಿ ಕೇಂದ್ರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಅವರು ಜವಾಬ್ದಾರಿ ವಹಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಜೂನಿಯರ್ ಕಾಲೇಜು ಆವರಣದಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡುವುದರೊಂದಿಗೆ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಮೊಬೈಲ್ ಶೌಚಾಲಯಗಳನ್ನು ಅಳವಡಿಸಲು ನಗರಸಭೆ ಪೌರಾಯುಕ್ತರಿಗೆ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರಿಗೆ ಹಾಗೂ ಗಣ್ಯರಿಗೆ ಕ್ಯಾನ್ಗಳು ಮತ್ತು ಗ್ಲಾಸ್ಗಳ ಮೂಲಕ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ನಿರ್ದೇಶಿಸಲಾಯಿತು. ಕಾರ್ಯಕ್ರಮದ ಅವಧಿಯಲ್ಲಿ ವಿದ್ಯುತ್ ಕಡಿತವಾಗದಂತೆ ಬೆಸ್ಕಾಂ ಇಲಾಖೆ ಎಚ್ಚರವಹಿಸಬೇಕು ಮತ್ತು ಪರ್ಯಾಯವಾಗಿ ಜನರೇಟರ್ ವ್ಯವಸ್ಥೆಯನ್ನು ಇಟ್ಟುಕೊಳ್ಳಬೇಕು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಅಗ್ನಿಶಾಮಕ ವಾಹನವನ್ನು ನಿಯೋಜಿಸುವಂತೆ ಅಗ್ನಿಶಾಮಕ ಅಧಿಕಾರಿಗಳಿಗೆ ಆದೇಶಿಸಲಾಯಿತು.
ಜಿಲ್ಲೆಯಾದ್ಯಂತ ಈ ಪ್ರಜಾಸೇವಾ ಆಂದೋಲನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವ ಜವಾಬ್ದಾರಿಯನ್ನು ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳಿಗೆ ವಹಿಸಲಾಯಿತು. ಗ್ರಾಮ ಪಂಚಾಯತಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಆಟೋಗಳ ಮೂಲಕ ಡಂಗುರ ಸಾರುವುದು, ಕರಪತ್ರ ಹಂಚುವುದು ಹಾಗೂ ಸ್ಥಳೀಯ ಟಿವಿ ಚಾನಲ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡಿಸಲು ತೀರ್ಮಾನಿಸಲಾಯಿತು. ವಿಶೇಷವಾಗಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರಿಗೆ ಈ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅರಿವು ಮೂಡಿಸಲು ಸೂಚನೆ ನೀಡಲಾಯಿತು.
ಕಾರ್ಯಕ್ರಮದ ದಿನದಂದು ಬೆಳಿಗ್ಗೆ ೭ ಗಂಟೆಯಿಂದಲೇ ಅರ್ಜಿಗಳ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ. ಇದಕ್ಕಾಗಿ ಸ್ಥಳದಲ್ಲಿ ಹತ್ತು ಕೌಂಟರ್ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಸಾರ್ವಜನಿಕರಿಗೆ ವೈಯಕ್ತಿಕ ಹಾಗೂ ಸಾರ್ವಜನಿಕ ಎಂಬ ಎರಡು ಮಾದರಿಯ ಅರ್ಜಿಗಳನ್ನು ವಿತರಿಸಲಾಗುತ್ತದೆ. ಸ್ವೀಕೃತವಾದ ಅರ್ಜಿಗಳನ್ನು ಸ್ಥಳದಲ್ಲಿಯೇ ಸ್ಕ್ಯಾನ್ ಮಾಡಿ ಐಪಿಜಿಆರ್ಎಸ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲು ಪ್ರತಿ ಕೌಂಟರ್ನಲ್ಲಿ ಲ್ಯಾಪ್ಟಾಪ್, ಪ್ರಿಂಟರ್ ಹಾಗೂ ಡೇಟಾ ಎಂಟ್ರಿ ಆಪರೇಟರ್ಗಳನ್ನು ನಿಯೋಜಿಸಲು ನಿರ್ದೇಶಿಸಲಾಯಿತು. ಇದಕ್ಕಾಗಿ ಸುಸಜ್ಜಿತ ಇಂಟರ್ನೆಟ್ ಸಂಪರ್ಕ ಕಲ್ಪಿಸುವಂತೆ ಎನ್.ಐ.ಸಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕಂದಾಯ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮ ಮುಗಿಯುವವರೆಗೂ ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಶ್ರಮಿಸಬೇಕು ಎಂದು ಸಿಇಒ ಡಾ . ಪ್ರವೀಣ್ ಪಿ ಬಾಗೇವಾಡಿ ಅವರು ಖಡಕ್ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಸ್ ಎಂ ಮಂಗಳ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಹೆಚ್ ಸಿ ಜಗದೀಶ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಉಪಕಾರ್ಯದರ್ಶಿ ಟಿ. ಕೆ. ರಮೇಶ್. ವಿವಿಧ ಸಮಿತಿಯ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್