
ಗದಗ, 02 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿದಿನ ಹಾಗೂ ಪ್ರತಿ ರವಿವಾರ ನಡೆಯುತ್ತಿರುವ ಸಂತೆ ಮಾರುಕಟ್ಟೆಯನ್ನು ಸ್ಥಳಾಂತರಿಸಿ, ಪಾಳುಬಿದ್ದಿರುವ ಎಪಿಎಂಸಿ ಮಾರುಕಟ್ಟೆಯನ್ನು ದುರಸ್ತಿಗೊಳಿಸಿ ಬಳಕೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಇಕ್ಕಟ್ಟಾದ ರಸ್ತೆಯಲ್ಲಿ ಸಂತೆ ಮಾರುಕಟ್ಟೆ ನಡೆಯುತ್ತಿರುವುದರಿಂದ ದಿನನಿತ್ಯ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಸಂತೆ ನಡೆಯುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಾಗೂ ವಾಹನಗಳು ಒಂದೇ ಸ್ಥಳದಲ್ಲಿ ಸೇರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಪಾದಚಾರಿಗಳು, ವಾಹನ ಸವಾರರು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದರು.
ಗ್ರಾಮೀಣ ಭಾಗಗಳಿಂದ ವಿವಿಧ ಕೆಲಸಗಳಿಗಾಗಿ ಶಿರಹಟ್ಟಿ ಪಟ್ಟಣಕ್ಕೆ ಆಗಮಿಸುವ ಜನರು ತಾಲೂಕು ಆಸ್ಪತ್ರೆ, ಪೊಲೀಸ್ ಠಾಣೆ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ರೇಷ್ಮೆ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಅರಣ್ಯ ಇಲಾಖೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳಿಗೆ ಇದೇ ಮಾರ್ಗವಾಗಿ ತೆರಳಬೇಕಾಗಿದೆ. ಸಂತೆ ಮಾರುಕಟ್ಟೆಯಿಂದಾಗಿ ಈ ಮಾರ್ಗದಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಹಲವು ಬಾರಿ ಅಪಘಾತಗಳು ಸಂಭವಿಸಿವೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಂತೋಷ ಕುರಿ ತಿಳಿಸಿದರು.
ಎಪಿಎಂಸಿ ಆವರಣ ನಿರ್ವಹಣೆಯಿಲ್ಲದೆ ಪಾಳು
ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎಪಿಎಂಸಿ ಮಾರುಕಟ್ಟೆ ಆವರಣ ಹಲವು ವರ್ಷಗಳಿಂದ ಸಮರ್ಪಕ ಬಳಕೆಯಾಗದೆ ಪಾಳುಬಿದ್ದಿದೆ. ಸೂಕ್ತ ನಿರ್ವಹಣೆಯಿಲ್ಲದೆ ಆವರಣದಲ್ಲಿ ಕಸ ಸಂಗ್ರಹವಾಗುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದೆ. ಬಸ್ ನಿಲ್ದಾಣದ ಸಮೀಪವೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಾರ್ವಜನಿಕರು ಹಾಗೂ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಎಪಿಎಂಸಿ ಮಾರುಕಟ್ಟೆ ಆವರಣವನ್ನು ಸ್ವಚ್ಛಗೊಳಿಸಿ ಅಗತ್ಯ ದುರಸ್ತಿ ಕಾಮಗಾರಿ ಕೈಗೊಂಡು ಮೂಲಸೌಕರ್ಯ ಕಲ್ಪಿಸಿದರೆ, ಪ್ರಸ್ತುತ ರಸ್ತೆ ಬದಿಯಲ್ಲಿ ನಡೆಯುತ್ತಿರುವ ಸಂತೆ ಮಾರುಕಟ್ಟೆಯನ್ನು ಅಲ್ಲಿಗೆ ಸ್ಥಳಾಂತರಿಸಬಹುದು. ಇದರಿಂದ ಪಟ್ಟಣದ ಸಂಚಾರ ಸಮಸ್ಯೆ ಕಡಿಮೆಯಾಗುವುದರ ಜೊತೆಗೆ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಸೂಕ್ತ ಸ್ಥಳಾವಕಾಶ ದೊರೆಯಲಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟರು.
ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಒತ್ತಾಯ
ಸಂತೆ ಮಾರುಕಟ್ಟೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವ ಮೂಲಕ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಮಾರುಕಟ್ಟೆ ಆವರಣದಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ, ವಾಹನ ನಿಲುಗಡೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಬಗೆಹರಿಸಲು ವಿಳಂಬ ಮಾಡಿದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಹೋರಾಟ ನಡೆಸಲಾಗುವುದು ಎಂದು ಮನವಿ ಸಲ್ಲಿಸಿದವರು ಎಚ್ಚರಿಕೆ ನೀಡಿದ್ದಾರೆ.
ಪಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ರಾಮಣ್ಣ ಕಂಬಳಿ, ಫಕ್ಕೀರೇಶ ರಟ್ಟಿಹಳ್ಳಿ, ವಿಠಲ ಭಿಡವೆ, ಸಂತೋಷ ತೋಡೆಕಾರ, ಬಸವರಾಜ ಕಲ್ಯಾಣಿ, ಚಂದ್ರು ಜೋಗೇರ, ಜಗದೀಶ ತೇಲಿ, ಗಣೇಶ ಬಿಡವೆ, ಪರಶುರಾಮ ಡೊಂಕಬಳ್ಳಿ, ಲಕ್ಷಣ ಪವಾರ, ಹನಮಂತ ಕುರಿ, ಮಾರುತಿ ಕೋಳಿ, ವಿಶ್ವನಾಥ ಧಳವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP