
ಬೆಂಗಳೂರು, 20 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರನ್ನು ತಪ್ಪಿಸಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಲಗ್ಗೆರೆ ಸಮೀಪದ ಯುವಕರು ತಡರಾತ್ರಿ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ವಾಹನ ಸಾಗುತ್ತಿದ್ದ ವೇಳೆ ಕೆಲವರು ಬೈಕ್ನಲ್ಲಿ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡುತ್ತಾ ಏಕಾಏಕಿ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಅವರನ್ನು ತಪ್ಪಿಸಲು ಚಾಲಕ ರವಿ ಪ್ರಯತ್ನಿಸಿದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮನೋಜ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಬಳಿಕ ಆಂಬುಲೆನ್ಸ್ ಸ್ಥಳಕ್ಕೆ ತಡವಾಗಿ ಬಂದಿತು ಎಂದು ಸ್ಥಳೀಯರು ಆರೋಪಿಸಿದ್ದು, ಇದರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಅಪಾಯಕಾರಿ ವ್ಹೀಲಿಂಗ್ಗೆ ಕಡಿವಾಣ ಹಾಕಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕಾರಣ ಹಾಗೂ ವ್ಹೀಲಿಂಗ್ ಮಾಡುತ್ತಿದ್ದವರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R