
ದಾವಣಗೆರೆ, 20 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ತೀವ್ರ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿರುವ ಜಗಳೂರು ತಾಲ್ಲೂಕನ್ನು ‘ತೀವ್ರ ಬರಪೀಡಿತ ತಾಲ್ಲೂಕು’ ಎಂದು ಘೋಷಿಸುವಂತೆ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿಯವರಿಗೆ ಜಗಳೂರು ತಾಲ್ಲೂಕಿನ ಬರ ಪರಿಸ್ಥಿತಿಯನ್ನು ವಿವರಿಸಿದ ಸಂಸದೆ, ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ–2020ರ ಮಾನದಂಡಗಳ ಅನ್ವಯ ಜಿಲ್ಲೆಯ ಬರ ಪರಿಸ್ಥಿತಿಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಜಗಳೂರು ಹೊರತುಪಡಿಸಿ ಉಳಿದ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.“ಹಿಂದುಳಿದ ತಾಲ್ಲೂಕಾಗಿರುವ ಜಗಳೂರು ಪದೇಪದೇ ಬರ ಪರಿಸ್ಥಿತಿ ಎದುರಿಸುತ್ತಿದೆ.
ಪ್ರಸಕ್ತ ಮುಂಗಾರು ಹಂಗಾಮಿನಲ್ಲೂ ಸಮರ್ಪಕ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತಿದ ಬೆಳೆಗಳು ಒಣಗುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯೂ ನಡೆದಿಲ್ಲ. ಮೇವಿನ ಕೊರತೆ ಹಾಗೂ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ” ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಜಗಳೂರನ್ನು ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸುವ ಕುರಿತು ಜಿಲ್ಲಾಧಿಕಾರಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾವು ಕೂಡ ಪ್ರತ್ಯೇಕವಾಗಿ ಈ ಕುರಿತು ಮನವಿ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
“ಜಗಳೂರಿನ ತೀವ್ರ ಮಳೆ ಕೊರತೆ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ಜನ–ಜಾನುವಾರು ಎದುರಿಸುತ್ತಿರುವ ನೀರು ಮತ್ತು ಮೇವಿನ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.
ತಾಲ್ಲೂಕನ್ನು ತೀವ್ರ ಬರಪೀಡಿತವೆಂದು ಘೋಷಿಸಿ, ರೈತರು ಹಾಗೂ ಸಾರ್ವಜನಿಕರಿಗೆ ಅಗತ್ಯ ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಸಂಸದೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಹಾಗೂ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R