
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ರಾಜ್ಯ ಸರ್ಕಾರದ ಹಣಕಾಸು ಇಲಾಖೆಯೇ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಎಂಬುದನ್ನು ಬಹಿರಂಗಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಎದುರು ಬುಧವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇವಲ ಪ್ರಚಾರಕ್ಕಾಗಿ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ವಂಚಿಸುತ್ತಿರುವ ಕಾಂಗ್ರೆಸ್ ಸರ್ಕಾರ ನೈತಿಕವಾಗಿಯೂ ದಿವಾಳಿಯಾಗಿದೆ ಎಂದು ಟೀಕಿಸಿದರು.
ರಾಜ್ಯವನ್ನು ದಿವಾಳಿಯ ಅಂಚಿಗೆ ತಂದು ನಿಲ್ಲಿಸಿರುವ ಕಾಂಗ್ರೆಸ್ ಸರ್ಕಾರದ ದಿವಾಳಿತನದ ಪ್ರತೀಕವಾಗಿ ಪ್ರತಿಭಟನೆಯಲ್ಲಿ ‘ಖಾಲಿ ಚೊಂಬು’ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಬೊಕ್ಕಸ ಖಾಲಿಯಾಗಿದೆ. ಭ್ರಷ್ಟಾಚಾರದಲ್ಲಿ ಮಾತ್ರ ಅಪರಿಮಿತ ವೇಗದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.
ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.