
ಬೆಂಗಳೂರು, 23 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಹಣಕಾಸಿನ ಸ್ಥಿತಿಯನ್ನು ಖಂಡಿಸಿ ಬಿಜೆಪಿ–ಜೆಡಿಎಸ್ ಸದಸ್ಯರು ಬುಧವಾರ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಖಾಲಿ ಚೊಂಬು ಮತ್ತು ಚಿಪ್ಪು ಹಿಡಿದು ಪ್ರತಿಭಟನೆ ನಡೆಸಿದರು.
ಹಣಕಾಸು ಇಲಾಖೆಯು ರಾಜ್ಯದ ಸೀಮಿತ ಹಣಕಾಸು ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಹಾಗೂ ದೊಡ್ಡ ಮೊತ್ತದ ಯೋಜನೆಗಳನ್ನು ಕೈಗೆತ್ತಿಕೊಳ್ಳುವಾಗ ಎಚ್ಚರಿಕೆ ವಹಿಸುವಂತೆ ಸರ್ಕಾರಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. 2026–27ನೇ ಸಾಲಿನ ವಿತ್ತೀಯ ಕೊರತೆ ಶೇ.2.95ರಷ್ಟಿರಲಿದೆ ಎಂದು ಹಣಕಾಸು ಇಲಾಖೆಯ ಅಂದಾಜು ಉಲ್ಲೇಖಿಸಲಾಗಿದೆ.
ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ–ಜೆಡಿಎಸ್ ನಾಯಕರು ಹಾಗೂ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸರ್ಕಾರದ ಬಳಿ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಹಣವಿಲ್ಲ ಎಂದು ಆರೋಪಿಸಿದ ಅವರು, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
“ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣವಿಲ್ಲದಿದ್ದರೂ ಹೊಸ ಯೋಜನೆಗಳ ಘೋಷಣೆ ಮಾಡಲಾಗುತ್ತಿದೆ. ಹಣಕಾಸು ಇಲಾಖೆಯ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಪ್ರತಿಪಕ್ಷ ನಾಯಕ ಅಶೋಕ ಆಗ್ರಹಿಸಿದರು
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R