ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಸೆ.29ರಂದು ಪ್ರಹ್ಲಾದ್ ಜೋಶಿ ಮನೆ ಮುತ್ತಿಗೆ
ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ಆಗುತ್ತಿರುವ ಅನ್ಯಾಯ, ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್
ಕಬ್ಬಿಗೆ ಬೆಲೆ


ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳಿಂದ ಆಗುತ್ತಿರುವ ಅನ್ಯಾಯ, ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ನಿವಾಸಕ್ಕೆ ಬೃಹತ್ ಮುತ್ತಿಗೆ ಹಾಕಲು ರೈತ ಸಂಘಟನೆ ನಿರ್ಧರಿಸಿದೆ.

ವಿಜಯಪುರ ನಗರದ ಖಾಸಗಿ ಹೋಟೆಲ್ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಕಳೆದ ಮೂರು ದಶಕಗಳಿಂದ ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಕ್ಕೆ ನ್ಯಾಯಯುತ ಹಾಗೂ ವೈಜ್ಞಾನಿಕ ಬೆಲೆ ದೊರೆಯಬೇಕೆಂದು ಆಗ್ರಹಿಸುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದ್ದು, ಕಬ್ಬು ಬೆಳೆಗಾರರಿಗೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಎರಡು ಲಕ್ಷಕ್ಕೂ ಅಧಿಕ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಸಂಗಮೇಶ ಸಗರ ತಿಳಿಸಿದರು.

ಟನ್ ಕಬ್ಬಿಗೆ ₹5,500 ನಿಗದಿಗೆ ಒತ್ತಾಯ

ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆ ₹60ಕ್ಕೆ ಹೆಚ್ಚಿಸಬೇಕು. ಪ್ರಸಕ್ತ 2026–27ನೇ ಸಾಲಿನಲ್ಲಿ ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಕಬ್ಬಿನ ತೂಕದಲ್ಲಿ ಪಾರದರ್ಶಕತೆ ತರಲು ಸರ್ಕಾರದ ವತಿಯಿಂದ ಡಿಜಿಟಲ್ ತೂಕದ ಯಂತ್ರಗಳನ್ನು ಸ್ಥಾಪಿಸಬೇಕು. ರೈತರಿಗೆ ಕಬ್ಬಿನ ತೂಕದ ಬಗ್ಗೆ ಯಾವುದೇ ಅನುಮಾನ ಉಂಟಾಗದಂತೆ ಸಂಪೂರ್ಣ ಪಾರದರ್ಶಕ ವ್ಯವಸ್ಥೆ ರೂಪಿಸಬೇಕು. ಕಬ್ಬಿನ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಅವರು ಒತ್ತಾಯಿಸಿದರು.

ಇಳುವರಿ ಹಾಗೂ ಕಬ್ಬಿನ ಗುಣಮಟ್ಟ ನಿರ್ಧಾರದಲ್ಲಿಯೂ ಪಾರದರ್ಶಕತೆ ಇರಬೇಕು. ಈ ಪ್ರಕ್ರಿಯೆಯಲ್ಲಿ ರೈತ ಮುಖಂಡರು ಹಾಗೂ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ವ್ಯವಸ್ಥೆ ರೂಪಿಸಬೇಕು ಎಂದು ನಡಹಳ್ಳಿ ಹೇಳಿದರು.

ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ಮೂಲಕ ಸೃಷ್ಟಿಯಾಗುವ ಆದಾಯದಲ್ಲಿ ರೈತರಿಗೆ ಶೇ.75ರಷ್ಟು ಹಾಗೂ ಕಾರ್ಖಾನೆಗಳಿಗೆ ಶೇ.25ರಷ್ಟು ಪಾಲು ನೀಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದರು.

C2+50% ಆಧಾರದಲ್ಲಿ ಬೆಲೆ ನಿಗದಿಗೆ ಆಗ್ರಹ

ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, ಕಬ್ಬಿನಿಂದ ವಾರ್ಷಿಕವಾಗಿ ಸೃಷ್ಟಿಯಾಗುವ ಒಟ್ಟು ಆದಾಯದಲ್ಲಿ ರೈತರಿಗೆ ನ್ಯಾಯಯುತ ಪಾಲು ದೊರೆಯಬೇಕು. ಸಕ್ಕರೆ ಕಾರ್ಖಾನೆಗಳ ಆದಾಯ ಮತ್ತು ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ಆಡಿಟ್ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕಬ್ಬು ಸೇರಿದಂತೆ ಎಲ್ಲ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ರೈತರ ಉತ್ಪಾದನಾ ವೆಚ್ಚದ ಆಧಾರದ ಮೇಲೆ C2+50% ಸೂತ್ರದಲ್ಲಿ ಬೆಲೆ ನಿಗದಿ ಮಾಡುವ ಮೂಲಕ ಕೃಷಿಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸೆಪ್ಟೆಂಬರ್ 29ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹುಬ್ಬಳ್ಳಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಮಹಾದೇವ ಬನಸೋಡೆ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರಕಾಶ ತೇಲಿ, ಸಂಗಪ್ಪ ಟಕ್ಕೆ, ಅಮರೇಶ ಬೈರಗೊಂಡ ಸೇರಿದಂತೆ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande