
ಕೋಲಾರ, 29 ಸೆಪ್ಟೆಂಬರ್ (ಹಿ.ಸ) :
ಹಿಂದುಳಿದ ವರ್ಗಗಳು, ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಏಳಿಗೆಗೆ ಕಾಂಗ್ರೆಸ್ ಪಕ್ಷವೇ ತಳಪಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಹಿಂದುಳಿದ ವರ್ಗಗಳಲ್ಲಿ ೭೪೪ಕ್ಕೂ ಹೆಚ್ಚು ಉಪಜಾತಿಗಳಿದ್ದು, ಪ್ರತಿಯೊಂದು ಸಮುದಾಯದ ಆಚಾರ–ವಿಚಾರ, ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ವಿಭಿನ್ನವಾಗಿದೆ. ಕಾಯಕ ಸಮಾಜಗಳು ಬದುಕಿಗಾಗಿ ಹಲವು ಬದಲಾವಣೆಗಳನ್ನು ಕಂಡಿವೆ. ಹೀಗಾಗಿ ಹಿಂದುಳಿದ ವರ್ಗಗಳು ಸಂಘಟಿತರಾಗಿ ತಮ್ಮ ಹಕ್ಕುಗಳು ಹಾಗೂ ಅವಕಾಶಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ, ಧರ್ಮಸಿಂಗ್ ಹಾಗೂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಏಳಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಹಸಿವು ನಿವಾರಣೆಗೆ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಎರಡನೇ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪ್ರತಿ ೧೦೦ ಫಲಾನುಭವಿಗಳಲ್ಲಿ ಸುಮಾರು ೬೦ ಮಂದಿ ಹಿಂದುಳಿದ ವರ್ಗದವರು ಸೇರಿದವರಾಗಿದ್ದಾರೆ ಎಂದು ತಿಳಿಸಿದರು
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಈವರೆಗೆ ಗೆಲುವು ಸಾಧಿಸಿರಲಿಲ್ಲ. ಶಿಕ್ಷಕರು ಹಾಗೂ ಪದವೀಧರರ ಮಧ್ಯೆ ನಿರಂತರವಾಗಿ ಬೆರೆತು ಅವರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಗೆಲುವು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಕಾಂಗ್ರೆಸ್ನ ನಾಲ್ವರು ಶಾಸಕರಿದ್ದು, ಕಳೆದುಕೊಂಡಿರುವ ಎರಡು ಸ್ಥಾನಗಳನ್ನು ಮರಳಿ ಪಡೆಯಲು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ ಮಾತನಾಡಿ, ಡಿ.ಟಿ.ಶ್ರೀನಿವಾಸ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ಸ್ವಂತ ಬಲದಿಂದ ಆಗ್ನೇಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಪಕ್ಷದ ಕೆಲಸ ಮಾಡುವವರಿಗೆ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪ್ರವಾಸ ಕೈಗೊಂಡು ವಿವಿಧ ಸಮಿತಿಗಳನ್ನು ಬಲಪಡಿಸಲಾಗುವುದು ಎಂದರು.
ಒಬಿಸಿ ರಾಜ್ಯ ಉಪಾಧ್ಯಕ್ಷ ಒಬಿಸಿ ಮಂಜುನಾಥ್ ಮಾತನಾಡಿ, ಪಕ್ಷದ ಪದಾಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಹಿಂದೆ ಹಿಂದುಳಿದ ವರ್ಗಗಳ ಮುಖಂಡರಿಗೆ ರಾಜ್ಯದಿಂದ ಬಂದ ಅಷ್ಟು ಕೆರೆಗಳನ್ನು ಜಾರಿ ಮಾಡಿದ್ದೇವೆ ಹಿಂದುಳಿದ ವರ್ಗಗಳನ್ನು ಕಾಂಗ್ರೆಸ್ ಯಾವತ್ತೂ ಕೈಬಿಡುವುದಿಲ್ಲ ಎಂದರು.
ಒಬಿಸಿ ಮುಖಂಡ ಮುಳಬಾಗಿಲು ವೆಂಕಟೇಶ್ ಗೌಡ ಮಾತನಾಡಿ ಕಾಂಗ್ರೆಸ್ ಏಳಿಗೆಗಾಗಿ ಹಿಂದುಳಿದ ವರ್ಗಗಳ ಇದ್ದರೆ ಅದೇ ರೀತಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಇದೆ ಎಂದರು
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ವೇಮಗಲ್ ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಫ್ಸರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಸದಸ್ಯ ಕಿಲಾರಿಪೇಟೆ ಮಣಿ ದೀಪು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್