
ಗದಗ, 30 ಸೆಪ್ಟೆಂಬರ್ (ಹಿ.ಸ.)
ಗದಗ, ಸೆ.30: (ಹಿಂಸ) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭೂ ಮಾಪನ ಮತ್ತು ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ಮಾಪಕರ ಹುದ್ದೆಗಳ ನೇರ ನೇಮಕಾತಿಗಾಗಿ ಅ.2ರಂದು ನಡೆಯಲಿರುವ ಪರೀಕ್ಷೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಭೂ ಮಾಪಕರ ನೇಮಕಾತಿ ಪರೀಕ್ಷೆಯು ಅ.2ರಂದು ಎರಡು ಅವಧಿಯಲ್ಲಿ ನಡೆಯಲಿದೆ. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು ಆರು ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.
ಪರೀಕ್ಷಾ ಸಂದರ್ಭದಲ್ಲಿ ನಕಲು, ಪರೀಕ್ಷಾರ್ಥಿಗಳ ಬದಲಿಗೆ ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಸೇರಿದಂತೆ ಯಾವುದೇ ರೀತಿಯ ಅಕ್ರಮ ಹಾಗೂ ಅವ್ಯವಹಾರಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು, ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಬೆಳಿಗ್ಗೆ 8.30ರಿಂದ ಸಂಜೆ 5.30ರವರೆಗೆ ನಿರ್ಬಂಧ
ಅ.2ರಂದು ಬೆಳಿಗ್ಗೆ 8.30ರಿಂದ ಸಂಜೆ 5.30ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರಲಿದೆ. ಪರೀಕ್ಷೆಗೆ ನೇಮಕಗೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ನಿಷೇಧಿತ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಸಾರ್ವಜನಿಕರು ಹಾಗೂ ಪರೀಕ್ಷಾರ್ಥಿಗಳು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.
ಝೆರಾಕ್ಸ್ ಅಂಗಡಿಗಳಿಗೂ ಬಂದ್ ಆದೇಶ
ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳು, ಬುಕ್ಸ್ಟಾಲ್ಗಳು ಹಾಗೂ ಫೋಟೋ ಕಾಪಿ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ ಬಂದ್ ಮಾಡಲು ಆದೇಶಿಸಲಾಗಿದೆ. ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ನಕಲು ಅಥವಾ ಅಕ್ರಮಕ್ಕೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದೇ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಧ್ವನಿವರ್ಧಕಗಳ ಬಳಕೆಯನ್ನೂ ನಿರ್ಬಂಧಿಸಲಾಗಿದೆ. ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶಾಂತ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ.
ಮಾಧ್ಯಮಗಳಿಗೂ ನಿರ್ಬಂಧ
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಹಾಗೂ ಪರೀಕ್ಷೆ ಮುಗಿಸಿ ಹೊರಬರುವ ಸಂದರ್ಭದಲ್ಲಿ ಮಾತ್ರ ಮಾಧ್ಯಮದವರಿಗೆ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಪರೀಕ್ಷೆಯ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ಕೊಠಡಿಗಳೊಳಗೆ ಮಾಧ್ಯಮ ಪ್ರತಿನಿಧಿಗಳ ಪ್ರವೇಶ ಮತ್ತು ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮೊಬೈಲ್ ಸೇರಿ ಸಂಪರ್ಕ ಸಾಧನಗಳಿಗೆ ನಿಷೇಧ
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ಗಳು ಹಾಗೂ ಇತರೆ ಸಂಪರ್ಕ ಸಾಧನಗಳನ್ನು ತರುವಂತಿಲ್ಲ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, ನವದೆಹಲಿ ವತಿಯಿಂದ ನಿಷೇಧಿಸಲಾಗಿರುವ ಯಾವುದೇ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಪರೀಕ್ಷೆಯ ವೇಳೆ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳು ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಪ್ರತಿಬಂಧಕಾಜ್ಞೆ ಸೇರಿದಂತೆ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಪರೀಕ್ಷಾರ್ಥಿಗಳು ಹಾಗೂ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಪರೀಕ್ಷೆಯ ಸುಗಮ, ಶಾಂತಿಯುತ ಹಾಗೂ ಪಾರದರ್ಶಕ ನಿರ್ವಹಣೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP