
ಚಾಮರಾಜನಗರ, 30 ಸೆಪ್ಟೆಂಬರ್ (ಹಿ.ಸ.):
ಚಾಮರಾಜನಗರ ಜಿಲ್ಲೆಯ ಜನರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಶಕ್ತಿ ತುಂಬುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೊಳ್ಳೇಗಾಲ ಮತ್ತು ಹನೂರು ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚಿಸಲಾಗಿದೆ ಎಂದರು.
ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಸುಮಾರು ₹3,000 ಕೋಟಿ ಮೊತ್ತದ ಕಾಮಗಾರಿಗಳನ್ನು ನೀಡಲಾಗಿತ್ತು.
ಇದೀಗ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಸುಮಾರು 25ಕ್ಕೂ ಹೆಚ್ಚು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಇದು ಭರವಸೆಯ ಆರಂಭವಾಗಿದೆ ಎಂದು ಹೇಳಿದರು.
ಕೈಮಗ್ಗ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನಕೊಳ್ಳೇಗಾಲ ಭಾಗದಲ್ಲಿ ರೇಷ್ಮೆ ಕೃಷಿ ಪ್ರಮುಖ ಪಾರಂಪರಿಕ ವೃತ್ತಿಯಾಗಿದ್ದು, ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ಅಗತ್ಯವಿದೆ. ಕೈಮಗ್ಗ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
“ಸೇವೆಯೇ ನಮ್ಮ ಧರ್ಮ, ಅಭಿವೃದ್ಧಿಯೇ ನಮ್ಮ ಗುರಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಬೇಕು. ಕೇವಲ ಕಟ್ಟಡ ನಿರ್ಮಿಸುವುದೇ ಅಭಿವೃದ್ಧಿಯಲ್ಲ; ಜನರ ಬದುಕಿನಲ್ಲಿ ಬದಲಾವಣೆ ತರುವುದು ನಿಜವಾದ ಅಭಿವೃದ್ಧಿ” ಎಂದು ಹೇಳಿದರು.
2028ರ ಬಗ್ಗೆಯೂ ಹೇಳಿಕೆಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದ್ದು, ಜನರ ಬದುಕಿನಲ್ಲಿ ಬದಲಾವಣೆ ತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕೆಲವರದ್ದು ಹಗಲುಕನಸು ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಚಾಮರಾಜನಗರ ವಿವಿಗೆ ಅಂಬೇಡ್ಕರ್ ಹೆಸರುಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಬಂದಿದೆ. ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನೀರಾವರಿ ಕಾಮಗಾರಿಗಳಿಗೆ ಒತ್ತುಸುವರ್ಣಾವತಿ ನೀರಾವರಿ ಯೋಜನೆ ವ್ಯಾಪ್ತಿಯ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ₹120 ಕೋಟಿ ವೆಚ್ಚದ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ.
ಹನೂರು ಭಾಗದಲ್ಲಿ ಅಂತರ್ಜಲ ಅಭಿವೃದ್ಧಿ, ಚಾಮರಾಜನಗರದ ಬಳಿ ಕಾಲುವೆ ಕಾಮಗಾರಿ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ₹450 ಕೋಟಿ ವೆಚ್ಚದ ನೀರಾವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ₹1,000 ಕೋಟಿಗೂ ಹೆಚ್ಚು ಮೊತ್ತದ ನೀರಾವರಿ ಕಾಮಗಾರಿಗಳಿಗೆ ಒತ್ತು ನೀಡಲಾಗಿದ್ದು, ಕೃಷಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
“ಚಾಮರಾಜನಗರ ಜಿಲ್ಲೆಯ ಜನರೊಂದಿಗೆ ಇಡೀ ಸರ್ಕಾರ ನಿಂತಿದೆ. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಜನರನ್ನು ಸಬಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R