ಪ್ರಜಾಸೇವಾ ಅಭಿಯಾನ ಜನರ ಬಳಿಗೆ ಸರ್ಕಾರ ಕೊಂಡೊಯ್ಯುವ ಉದ್ದೇಶ: ಪರಮೇಶ್ವರ
ತುಮಕೂರು, 05 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ಗುಬ್ಬಿ ಪಟ್ಟಣದಲ್ಲಿ ಶನಿವಾರ ಪ್ರಜಾಸೇವಾ
ತುಮಕೂರಿನಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಉಪಮುಖ್ಯಮಂತ್ರಿ


ತುಮಕೂರು, 05 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಗುಬ್ಬಿ ಪಟ್ಟಣದಲ್ಲಿ ಶನಿವಾರ ಪ್ರಜಾಸೇವಾ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಮೊದಲ ಪ್ರಜಾಸೇವಾ ಅಭಿಯಾನ ಜನಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜನರು ಸಮಸ್ಯೆಗಳನ್ನು ಹೊತ್ತು ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಅಭಿಯಾನದ ಪ್ರಮುಖ ಉದ್ದೇಶ ಎಂದರು.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಪ್ರತಿ ತಾಲ್ಲೂಕಿನಲ್ಲಿ ಅಭಿಯಾನ ನಡೆಯಲಿದ್ದು, ಬಳಿಕ ಹೋಬಳಿ ಮಟ್ಟದಲ್ಲೂ ಸಭೆಗಳನ್ನು ನಡೆಸಲಾಗುವುದು. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆಯ ಮೇರೆಗೆ ತ್ವರಿತವಾಗಿ ವಿಲೇವಾರಿ ಮಾಡಬೇಕು. ಜನರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನ

ನಿವೇಶನ ಇಲ್ಲದ ಬಡವರಿಗೆ ಉಚಿತವಾಗಿ 30x40 ಅಡಿ ನಿವೇಶನ ನೀಡುವುದು ತಮ್ಮ ಆಶಯವಾಗಿದ್ದು, ರಾಜ್ಯಾದ್ಯಂತ 15 ಲಕ್ಷಕ್ಕೂ ಹೆಚ್ಚು ನಿವೇಶನಗಳನ್ನು ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದರು. ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ, ಶಾಸಕರ ಮೂಲಕ ಗ್ರಾಮಸಭೆ ನಡೆಸಿ ಅರ್ಹ ಬಡವರಿಗೆ ಹಂಚಿಕೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗ ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಖಾತೆಯಲ್ಲಿ 329 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಹೇಳಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರು ಹಾಗೂ ಅಗತ್ಯವಿರುವವರಿಗೆ ನೆರವಾಗುತ್ತಿವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳು ಜನರಿಗೆ ಅನುಕೂಲ ಕಲ್ಪಿಸಿವೆ ಎಂದು ಪರಮೇಶ್ವರ ಹೇಳಿದರು.

ಕಾರ್ಯಕ್ರಮದಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande