
ಗದಗ, 05 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:- ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸಮಯ ಮೀಸಲಿಡುವಂತಾಗಬೇಕು. ಬೋಧನಾ ಕಾರ್ಯಕ್ಕೆ ಆದ್ಯತೆ ನೀಡುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಾ . ಬಿ . ಆರ್.ಅಂಬೇಡ್ಕರ ಭವನದಲ್ಲಿ ಆಯೋಜಿಸಿದ್ದ ಡಾ . ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದ ಸರಾಸರಿ ಫಲಿತಾಂಶ ಶೇ.93ರಷ್ಟಿದ್ದರೆ, ಗದಗ ಜಿಲ್ಲೆ ಶೇ.94ರಷ್ಟು ಫಲಿತಾಂಶ ದಾಖಲಿಸಿ ರಾಜ್ಯದ ಸರಾಸರಿಯನ್ನು ಮೀರಿರುವುದು ಹೆಮ್ಮೆಯ ಸಂಗತಿ. ಇದಕ್ಕೆ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪರಿಶ್ರಮ ಕಾರಣವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಶಾಲಾ ಸಮಯಕ್ಕೂ ಮುನ್ನ ಹಾಗೂ ನಂತರ ಪರಿಹಾರ ಬೋಧನೆ, ಪರೀಕ್ಷಾ ಸಂದರ್ಭದಲ್ಲಿ ‘ಓದಿನ ಮನೆ’ ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಶ್ರಮಿಸಿದ ಶಿಕ್ಷಕರ ಸೇವೆಯನ್ನು ಅವರು ಶ್ಲಾಘಿಸಿದರು.
ರಾಧಾಕೃಷ್ಣನ್ ಅವರ ಆದರ್ಶ ಶಿಕ್ಷಕರಿಗೆ ಪ್ರೇರಣೆ
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನ, ಜ್ಞಾನ ಮತ್ತು ಶೈಕ್ಷಣಿಕ ಸೇವೆ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರೇರಣೆಯಾಗಿದೆ. ಉಪನ್ಯಾಸಕರಾಗಿ ಸೇವೆ ಆರಂಭಿಸಿ, ವಿಶ್ವವಿದ್ಯಾಲಯದ ಕುಲಪತಿ, ಉಪರಾಷ್ಟ್ರಪತಿ ಹಾಗೂ ರಾಷ್ಟ್ರಪತಿ ಹುದ್ದೆಗೇರಿದ ಅವರ ಜ್ಞಾನ, ಸರಳತೆ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಶಿಕ್ಷಕರು ತಮ್ಮ ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಕನೂರ ಹೇಳಿದರು.
ಶಿಕ್ಷಕ ವೃತ್ತಿಯು ಸಮಾಜ ನಿರ್ಮಾಣದ ಪ್ರಮುಖ ಕೊಂಡಿಯಾಗಿದೆ. ಶಿಕ್ಷಕರ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುವುದರ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸಲು ಸಾಧ್ಯ. ಶಿಕ್ಷಕರು ಕೇವಲ ಪಠ್ಯ ಬೋಧನೆಗೆ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳು, ಶಿಸ್ತು, ಜವಾಬ್ದಾರಿ ಹಾಗೂ ಆತ್ಮವಿಶ್ವಾಸ ಬೆಳೆಸುವ ಕಾರ್ಯದಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಉತ್ತಮ ಕಲಿಕಾ ಅವಕಾಶ ಕಲ್ಪಿಸುವ ಉದ್ದೇಶದಿಂದ ದ್ವಿಭಾಷಾ ಬೋಧನಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶಿಕ್ಷಕರಿಗೆ ಸಮಗ್ರ ತರಬೇತಿ ನೀಡುವುದು ಅಗತ್ಯ. ಕನಿಷ್ಠ ಆರು ತಿಂಗಳಿಂದ ಒಂದು ವರ್ಷದವರೆಗೆ ಹಂತ ಹಂತವಾಗಿ ತರಬೇತಿ ನೀಡಿದರೆ, ಶಿಕ್ಷಕರು ಹೆಚ್ಚಿನ ಆತ್ಮವಿಶ್ವಾಸದಿಂದ ದ್ವಿಭಾಷಾ ಬೋಧನೆ ನಡೆಸಲು ಅನುಕೂಲವಾಗಲಿದೆ ಎಂದು ಅವರು ಸಲಹೆ ನೀಡಿದರು.
ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ನಡೆಯುವ ಆನ್ಲೈನ್ ಹಾಗೂ ಡಿಜಿಟಲ್ ಕಾರ್ಯಗಳನ್ನು ಸುಗಮಗೊಳಿಸಲು ಅಗತ್ಯ ಸಹಾಯಕ ಸಿಬ್ಬಂದಿಯನ್ನು ಒದಗಿಸುವ ಕುರಿತು ಸರ್ಕಾರ ಗಮನ ಹರಿಸಬೇಕು ಎಂದು ಸಂಕನೂರ ಹೇಳಿದರು.
ಶಾಲೆಗಳಲ್ಲಿ ಕಂಪ್ಯೂಟರ್ ಅಥವಾ ಡೇಟಾ ಎಂಟ್ರಿ ಆಪರೇಟರ್ಗಳನ್ನು ಒದಗಿಸುವುದರಿಂದ ಡಿಜಿಟಲ್ ಕಾರ್ಯಗಳು ವ್ಯವಸ್ಥಿತವಾಗಿ ನಡೆಯುವುದರ ಜೊತೆಗೆ, ಶಿಕ್ಷಕರು ವಿದ್ಯಾರ್ಥಿಗಳ ಬೋಧನೆ, ಮಾರ್ಗದರ್ಶನ ಹಾಗೂ ಕಲಿಕಾ ಚಟುವಟಿಕೆಗಳಿಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುತ್ತದೆ ಎಂದರು.
ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳ ಉದ್ದೇಶ ಶಿಕ್ಷಕರ ಕಾರ್ಯವನ್ನು ಸುಲಭಗೊಳಿಸುವುದು ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದಾಗಿರಬೇಕು. ಡಿಜಿಟಲ್ ವ್ಯವಸ್ಥೆಗಳನ್ನು ಸಹಕಾರ ಮತ್ತು ಪಾರದರ್ಶಕತೆಯ ದೃಷ್ಟಿಕೋನದಿಂದ ಬಳಸುವ ಮೂಲಕ ಶಿಕ್ಷಕರ ಆತ್ಮವಿಶ್ವಾಸ ಹೆಚ್ಚಿಸುವ ಹಾಗೂ ಬೋಧನೆಗೆ ಪೂರಕವಾದ ವಾತಾವರಣ ನಿರ್ಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಶಿಕ್ಷಕರ ಪರಿಶ್ರಮಕ್ಕೆ ಗೌರವ ನೀಡುವುದರ ಜೊತೆಗೆ, ಅವರಿಗೆ ಅಗತ್ಯ ಸೌಲಭ್ಯ ಮತ್ತು ಸಹಕಾರ ಒದಗಿಸಿದಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಶಿಕ್ಷಕರನ್ನು ಗೌರವಿಸಲಾಯಿತು. ನಿವೃತ್ತ ಶಿಕ್ಷಕರಿಗೂ ಸನ್ಮಾನ ನೆರವೇರಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / lalita MP