
ವಿಜಯನಗರ, 05 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಶಿಕ್ಷಕರಿಗೆ ವೃತ್ತಿ ಆಧಾರಿತ ಗೌರವ ನೀಡುವ ಉದ್ದೇಶದಿಂದ ಇನ್ನುಮುಂದೆ ಶಾಲಾ ಶಿಕ್ಷಕರು ತಮ್ಮ ಹೆಸರಿನ ಮುಂದೆ ‘ಟಿಆರ್’ ಬಿರುದು ಬಳಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಶನಿವಾರ ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದ್ದು, ರಾಜ್ಯದ ಸುಮಾರು 4.50 ಲಕ್ಷ ಶಿಕ್ಷಕರಿಗೆ ಗೌರವ ಸೂಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಜನ್ಮ ನೀಡಿದ ತಂದೆ-ತಾಯಿ ಮೊದಲ ದೇವರಾಗಿದ್ದರೆ, ಬದುಕಿಗೆ ಮಾರ್ಗದರ್ಶನ ನೀಡುವ ಶಿಕ್ಷಕರು ಎರಡನೇ ದೇವರು. ಅಕ್ಷರ ಸೇವೆ ಪರಮಾತ್ಮನ ಸೇವೆ. ಯಾವುದೇ ಸ್ವಾರ್ಥವಿಲ್ಲದೆ ಸಮಾಜವನ್ನು ತಿದ್ದಿ, ಮಾರ್ಗದರ್ಶನ ನೀಡುವ ಶಿಕ್ಷಕರ ಸೇವೆ ಅತ್ಯಂತ ಮಹತ್ವದ್ದು ಎಂದು ಹೇಳಿದರು.
ದೇಶಕ್ಕೆ ಸೈನಿಕ, ಕಾರ್ಮಿಕ, ಶಿಕ್ಷಕ ಹಾಗೂ ಕೃಷಿಕರು ಪ್ರಮುಖ ಆಧಾರಸ್ತಂಭಗಳಾಗಿದ್ದು, ಅವರಿಗೆ ಗೌರವ ನೀಡುವುದು ಸರ್ಕಾರದ ಜವಾಬ್ದಾರಿ ಎಂದರು.
ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಗ್ರಾಮೀಣ ಭಾಗದ ಮಕ್ಕಳಿಗೆ 7.5ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.