
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಲಿಸಿ, ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು. ಮೌಲಾನಾ ಆಜಾದ್ ಶಾಲೆಗಳನ್ನು ಕೆಪಿಎಸ್ ಮಾದರಿಯಲ್ಲಿ ಉನ್ನತೀಕರಿಸುವುದು, ಮಹಿಳಾ ಕಾಲೇಜುಗಳ ಆರಂಭ ಸೇರಿದಂತೆ ಆಯವ್ಯಯದಲ್ಲಿ ಘೋಷಿಸಿರುವ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸೂಚಿಸಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ರೇಷ್ಮೆ ಕೃಷಿ ಯೋಜನೆಯಡಿ ನೀಡುತ್ತಿರುವ ಸಹಾಯಧನ ಹಾಗೂ ಸಾಲ ಸೌಲಭ್ಯಗಳ ಕುರಿತು ರೇಷ್ಮೆ ಕೃಷಿಕರೊಂದಿಗೆ ಸಮಾಲೋಚಿಸಿ ಯೋಜನೆಯನ್ನು ಪುನರ್‌ರೂಪಿಸುವಂತೆ ನಿರ್ದೇಶಿಸಿದರು.
ಹಾಸ್ಟೆಲ್‌ಗಳಲ್ಲಿ ಮೆಸ್ ವ್ಯವಸ್ಥೆ ಸುಧಾರಣೆ
ಅಲ್ಪಸಂಖ್ಯಾತರ ಶಿಕ್ಷಣ ಮತ್ತು ಹಾಸ್ಟೆಲ್‌ಗಳ ವ್ಯವಸ್ಥೆ ಪರಿಶೀಲನೆಗೆ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯಸಭಾ ಸದಸ್ಯ ಮನ್ಸೂರ್ ಖಾನ್ ಅಧ್ಯಕ್ಷತೆಯ ಶಿಕ್ಷಣ ಸಮಿತಿ ಹಾಗೂ ಉತ್ತರ ಕರ್ನಾಟಕದಲ್ಲಿ ಶಾಸಕ ಯಾಸಿರ್ ಪಠಾಣ್, ದಕ್ಷಿಣ ಕರ್ನಾಟಕದಲ್ಲಿ ಶಾಸಕಿ ಬಿಲ್ಕಿಸ್ ಬಾನು ಅಧ್ಯಕ್ಷತೆಯ ಹಾಸ್ಟೆಲ್ ಸಮಿತಿಗಳು ಪ್ರವಾಸ ಮಾಡಿ ವರದಿ ಸಲ್ಲಿಸಿವೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಆಯ್ದ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳೇ ನಿರ್ವಹಿಸುವ ಮೆಸ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉತ್ತಮ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.